ಬಾಗಲಕೋಟೆ : ರಾಜ್ಯಾದ್ಯಂತ ಸೇವೆ ಸಲ್ಲಿಸುವ ಅತಿಥಿ ಉಪನ್ಯಾಸಕರ ಸೇವೆಯನ್ನು ಕೂಡಲೇ ಕಾಯಂಗೊಳಿಸುವ ಮೂಲಕ ಅವರ ಬದುಕಿಗೆ ಭದ್ರತೆ ಒದಗಿಸಬೇಕು ಎಂದು ಚರಂತಿಮಠ ಮತ್ತು ವಸ್ರ್ತದ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಮಲ್ಲಿಕಾರ್ಜುನ ಚರಂತಿಮಠ ಒತ್ತಾಯಿಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಕಳೆದ 27 ದಿನಗಳಿಂದ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಧರಣಿಗೆ ಬೆಂಬಲ ವ್ಯಕ್ತಪಡಿಸಿ ಅವರು ಮಾತನಾಡಿದರು.
ಅತಿಥಿ ಉಪನ್ಯಾಸಕರು ಅತ್ಯಂತ ಕಡಿಮೆ ವೇತನದಲ್ಲಿ ಕೆಲಸ ಮಾಡುತ್ತಿದ್ದಾರೆ. ದೇಶದ ಯುವ ಸಮುದಾಯವನ್ನು ವಿದ್ಯಾವಂತರನ್ನಾಗಿ ಮಾಡುವ ಜತೆಗೆ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಉಪನ್ಯಾಸಕರು ನಿಭಾಯಿಸುತ್ತಿದ್ದಾರೆ. ಕಳೆದ 27 ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಸಚಿವರು, ಸಂಬಂದಿಸಿದ ಅಧಿಕಾರಿಗಳು ಅವರ ಬೇಡಿಕೆಗೆ ಸ್ಪಂದಿಸದೇ ಇರುವುದು ಸರ್ಕಾರದ ನಿರ್ಲಕ್ಷ್ಯ ಎತ್ತಿ ತೋರಿಸುತ್ತದೆ ಎಂದು ಆರೋಪಿಸಿದರು.
ಉಪನ್ಯಾಸಕರು, ತರಗತಿ ಬಹಿಷ್ಕರಿಸಿ ಹೋರಾಟ ನಡೆ ಸುತ್ತಿರುವುದರಿಂದ ಕಾಲೇಜು ವಿದ್ಯಾರ್ಥಿಗಳಿಗೂ ಸಮಸ್ಯೆ ಯಾಗಿದೆ. ಈ ಕೂಡಲೇ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಠಿಯಿಂದ ಹಾಗೂ ಉಪನ್ಯಾಸಕರ ಬದುಕಿಗೆ ಭದ್ರತೆಗಾಗಿ ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು. ಇದು ಕೇವಲ ಬಾಗಲಕೋಟೆ ಜಿಲ್ಲೆಯ ಸಮಸ್ಯೆಯಲ್ಲ. ಇಡೀ ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರು ಇಂದು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಅವರಿಗೆ ತಕ್ಷಣ ಸ್ಪಂದಿಸಬೇಕು ಎಂದು ಆಗ್ರಹಿಸಿದರು.
ಕಾಮಧೇನು ಸಂಸ್ಥೆಯ ಅಧ್ಯಕ್ಷ ರವಿ ಕುಮಟಗಿ, ವಿಜಯ ಸುಲಾಖೆ, ಗುರು ಅನಗವಾಡಿ, ಅರುಣ ಲೋಕಾಪುರ, ಪ್ರಶಾಂತ ಸೋನಕನಾಳ, ರಾಘು ಯಾದಗಿರಿ ಮುಂತಾದವರು ಪಾಲ್ಗೊಂಡಿದ್ದರು.